ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾದ ವಿವಾದಾತ್ಮಕ ಹಾಗೂ ಕೋಮು ಪ್ರಚೋದನಕಾರಿ ಸಂದೇಶ, ಬೆಂಗಳೂರಿನ ಕೆಜಿ ಹಳ್ಳಿಯನ್ನು ಅಕ್ಷರಶಃ ರಣಾಂಗಣವನ್ನಾಗಿಸಿತು. ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿಕನೊಬ್ಬ ಹಾಕಿದ್ದ ಅವಹೇಳನಕಾರಿ ಪೋಸ್ಟ್ ಒಂದು ಕೋಮಿನ ಜನರನ್ನು ರೊಚ್ಚಿಗೆಬ್ಬಿಸಿತು.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೂ 110 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೂ ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡಲು ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ’ ಎಂದು ಆರೋಪಿಸಿದ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ಮೇ 11ರ ರಾತ್ರಿ 10 ಗಂಟೆ ವೇಳೆಗೆ ಆರಂಭವಾದ ಗಲಭೆ, ತೀವ್ರ ಸ್ವರೂಪ ಪಡೆದುಕೊಂಡಿತು. ಅಖಂಡ ಶ್ರೀನಿವಾಸ್ ಮನೆಗೆ ಗಲಭೆಕೋರರು ಬೆಂಕಿ ಹಚ್ಚಿದರು. ಗಲಭೆ ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದರು. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರು. ಗಲಭೆಯಲ್ಲಿ 110 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, 60 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿವೆ.
ಪೊಲೀಸರ ಫೈರಿಂಗ್ ನಡುವಲ್ಲೇ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚುವ ಕೆಲಸವನ್ನು ಗಲಭೆಕೋರರು ಮುಂದುವರೆಸಿದ್ದರು. ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೂ ಕಲ್ಲು ತೂರಾಟ ನಡೆದಿದೆ. ಪೊಲೀಸ್ ಜೀಪ್ ಕೂಡಾ ಬೆಂಕಿಗಾಹುತಿಯಾಗಿದೆ.
ಪರಿಸ್ಥಿತಿ ನಿಯಂತ್ರಣ
ಮಂಗಳವಾರ ರಾತ್ರಿ ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅನಾಹುತಕಾರಿ ದಾಂಧಲೆ ಸದ್ಯ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಸದ್ಯ ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿಯಲ್ಲಿದೆ ಮತ್ತು ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿಯಲ್ಲಿ ಕರ್ಫ್ಯೂ ಹೇರಲಾಗಿದೆ.
ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ: ಬಿಎಸ್ ವೈ
ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧ. ಇಂತಹ ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
Comments are closed.