ಬೆಂಗಳೂರು: ನೀವು ಮನೆಯಿಂದ ಹೊರಗೆ ಹೋಗುವಾಗ ಮಾಸ್ಕ್ ಹಾಕುವುದನ್ನು ಮರೆಯಬೇಡಿ. ಮರೆತರೆಂದರೆ ದುಬಾರಿ ದಂಡ ಕಟ್ಟಲು ರೆಡಿಯಾಗಿರಿ. ಹೌದು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾಸ್ಕ್ ಹಾಕಿದವರಿಗೆ 1,000 ರೂ. ಹಾಗೂ 500 ರೂ. ದಂಡ ವಿಧಿಸಲಾಗುತ್ತದೆ.
ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ನಿರ್ಲಕ್ಷ್ಯ ತೋರುತ್ತಿರುವವರಿಗೆ ದುಬಾರಿ ದಂಡ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 1,000 ರೂ. ಹಾಗೂ ಇತರೆ ಪ್ರದೇಶಗಳಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ. ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರಾ ಎಂದು ಅಂಗಡಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಹೊಸ ನಿಯಮದ ಅನ್ವಯ, ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಮದುವೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗರಿಷ್ಠ 50 ಜನರು ಸೇರಲು ಮಾತ್ರ ಅವಕಾಶವಿರಲಿದೆ. ಹೆಚ್ಚು ಜನ ಸೇರಿದರೆ ಆಯೋಜಕರು ಅಥವಾ ಆ ಸಂಸ್ಥೆ ಮಾಲೀಕರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು. ಎಲ್ಲ ಸರ್ಕಾರಿ ಕಚೇರಿಗಳ ಕೆಲಸಗಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಇಲ್ಲವಾದರೆ ಕಚೇರಿ ಪ್ರವೇಶವಿರುವುದಿಲ್ಲ. ಸಾಧ್ಯವಾದಷ್ಟು ಮಟ್ಟಿಗೆ ಮನೆಯಿಂದಲೇ ಕೆಲಸ ಮಾಡುವ ಪದ್ಧತಿಯನ್ನು ಅನುಕರಿಸಬೇಕು. ಕೆಲಸದ ಸಂಪೂರ್ಣ ಪ್ರದೇಶವನ್ನು ಆಗಾಗ ಸ್ಯಾನಿಟೈಸ್ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.
Comments are closed.