ಹೊಸಪೇಟೆ: ರಾಜ್ಯದ 31ನೇ ಜಿಲ್ಲೆಯಾಗಿ ‘ವಿಜಯನಗರ’ ಅಸ್ತಿತ್ವಕ್ಕೆ ಬಂದಿದೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಜಿಲ್ಲೆಯನ್ನು ಉದ್ಘಾಟಿಸಿದರು. ವಿಜಯಸ್ತಂಭ ಅನಾವರಣಗೊಳಿಸಿದ ಸಿಎಂ, ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯನಗರ ಜಿಲ್ಲೆಯಲ್ಲಿ ಸಂಸ್ಕೃತಿ ಬಿಂಬಿಸುವ ಇತಿಹಾಸವಿದೆ. ಹಂಪಿಗೆ ಯಾತ್ರಿಗಳು ಇನ್ನೂ ಹೆಚ್ಚಿನ ಮಟ್ಟದಲ್ಲಿ ಬರಬೇಕು. 643 ಕೋಟಿಯಲ್ಲಿ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ವಿಶಾಲವಾದ ಜಿಲ್ಲಾಡಳಿತ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಎಲ್ಲ ರೀತಿಯ ಹಣಕಾಸಿನ ನೆರವನ್ನು ಸರಕಾರ ಮಾಡಲಿದೆ. ಸಮಯಕ್ಕನುಸಾರವಾಗಿ ಎಲ್ಲ ಅನುದಾನ ಬಿಡುಗಡೆ ಮಾಡಲಾಗುವುದು. ವಿಜಯನಗರ ಜಿಲ್ಲೆ ಸ್ಥಾಪನೆ ದಿನ ಅಭಿವೃದ್ಧಿ ಪರ್ವ ಆರಂಭವಾಗಿದೆ ಎಂದು ಹೇಳಿದರು.
337 ಕೋಟಿ ರೂ.ಗಳ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ವಿಜಯನಗರ ಜಿಲ್ಲೆಯ ಸ್ಥಾಪನೆಯ ದಿನ ಅಭಿವೃದ್ಧಿ ಪರ್ವದ ಆರಂಭದ ಸಂಕೇತ ಎಂದು ತಿಳಿಸಿದರು. 31ನೇ ಜಿಲ್ಲೆಯಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ 250 ಬೆಡ್ ಗಳ ಆಸ್ಪತ್ರೆಯ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ನುಡಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿ, ಇಂದು ಆನಂದ್ ಸಿಂಗ್ ಸಂಭ್ರಮ ಪಡುತ್ತಿದ್ದು ಅವರು ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ ಎಂದರು.
ಸಾರಿಗೆ ಸಚಿವ ಶ್ರೀರಾಮುಲು ಮಾತನಾಡಿ, ಆಡಳಿತ ವ್ಯವಸ್ಥೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರದಂತೆ ಹೊಸ ಜಿಲ್ಲೆ ಅಸ್ವಿತ್ವಕ್ಕೆ ಬಂದಿದ್ದು, ನೂತನ ಜಿಲ್ಲೆ ವಿಜಯನಗರ ಸಾಮ್ರಾಜ್ಯದಂತೆ ವೈಭವಯುತವಾಗಿ ಮೆರೆಯಬೇಕು ಎಂದು ಹೇಳಿದರು.
Comments are closed.