ನವದೆಹಲಿ: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ವೇಗಿ ಕಗಿಸೋ ರಬಾಡ 12ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಮೇ.30ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ರಬಾಡರನ್ನು ತವರಿಗೆ ಕರೆಸಿಕೊಂಡಿದೆ. ಮಹತ್ವದ ಘಟ್ಟದಲ್ಲಿ ರಬಾಡ ತವರಿಗೆ ಮರಳಿರುವುದು ಡೆಲ್ಲಿ ಪಾಲಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.
ಆಡಿದ 12 ಪಂದ್ಯಗಳಲ್ಲಿ 25 ವಿಕೆಟ್ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ಮುಡಿಗೇರಿಸಿಕೊಂಡಿರುವ ರಬಾಡ, ಬೆನ್ನು ನೋವಿನ ಸಮಸ್ಯೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್’ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ರಬಾಡ ಟೂರ್ನಿಯಿಂದ ಹೊರಬಿದ್ದಿರುವುದರಿಂದ ಲೀಗ್ ಹಂತದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಪ್ಲೇ ಆಫ್ ಪಂದ್ಯಗಳು ಬಾಕಿಯಿರುವಾಗಲೇ ತಂಡ ತೊರೆದಿರುವುದು ಡೆಲ್ಲಿ ತಂಡಕ್ಕೆ ಆತಂಕವನ್ನುಂಟು ಮಾಡಿದೆ.
ಇನ್ನು ವಿಶ್ವಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ದಕ್ಷಿಣ ಆಫ್ರಿಕಾ ವೇಗಿಗಳು ಗಾಯಕ್ಕೆ ತುತ್ತಾಗುತ್ತಿರುವುದು ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ಕೇವಲ 2 ಐಪಿಎಲ್ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಡೇಲ್ ಸ್ಟೇನ್ ಭುಜದ ನೋವಿನ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದರು. ಇನ್ನು ಲುಂಗಿ ಎನ್’ಗಿಡಿ ಕೂಡಾ ಗಾಯಕ್ಕೆ ತುತ್ತಾಗಿದ್ದಾರೆ.
ಇಂಗ್ಲೆಂಡ್’ನಲ್ಲಿ ಮೇ.30ರಿಂದ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೆಣಸಲಿದೆ.
Comments are closed.