ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಸ್ಪತ್ರೆಯ ನಿರ್ವಹಣೆ ಸರ್ಕಾರಕ್ಕೆ ಹಸ್ತಾಂತರ ಮಾಡಿ ನಿರ್ಣಯ ಕೈಗೊಳ್ಳಲಾಗಿದೆ.
200 ಬೆಡ್ ಗಳ ಈ ಆಸ್ಪತ್ರೆಗೆ ಪ್ರಸ್ತುತ ಇರುವ ಎಲ್ಲಾ ಸಿಬ್ಬಂದಿಗಳ ಸಹಿತ 103 ಮಂದಿ ಹೆಚ್ಚುವರಿ ಸಿಬ್ಬಂದಿ ಹಾಗೂ ವಾರ್ಷಿಕ ಅನುದಾನ ರೂ. 9.83 ಕೋಟಿಗೆ ಅನುಮೋದನೆ ನೀಡಲಾಗಿದೆ.
ಬಡರೋಗಿಗಳ ಹಿತದೃಷ್ಟಿಯಿಂದ ಈ ಆಸ್ಪತ್ರೆಯ ನಿರ್ವಹಣೆಯನ್ನು ಸಮರ್ಪಕವಾಗಿ ನಡೆಸುವ ನಿಟ್ಟಿನಲ್ಲಿ ಸರ್ಕಾರ ಮದ್ಯ ಪ್ರವೇಶಿಸಿ ಸರ್ಕಾರದ ವಶಕ್ಕೆ ಪಡೆಯುವಂತೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಇಲಾಖೆ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಿರುವುದಲ್ಲದೆ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿ ಸಂಪೂರ್ಣ ಮಾಹಿತಿಯನ್ನು ನೀಡಿ ಒತ್ತಾಯಿಸಿದಾಗ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ನೀಡಿದ್ದರು.
250 ಬೆಡ್ ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದ ಉಡುಪಿ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡದ ಶಿಲಾನ್ಯಾಸದ ಸಂದರ್ಭ ಮಾನ್ಯ ಮುಖ್ಯಮಂತ್ರಿಯವರು ಸದರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆದು ನಿರ್ವಹಿಸುವ ಬಗ್ಗೆ ಭರವಸೆಯನ್ನು ನೀಡಿದ್ದರು. ಅದರಂತೆ ಪ್ರಸ್ತುತ ಇರುವ ಎಲ್ಲಾ ಸಿಬ್ಬಂದಿ ಸಹಿತ 200 ಬೆಡ್ ಗಳ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯನ್ನು ಸರ್ಕಾರಕ್ಕೆ ಹಸ್ತಾಂತರಿಸಿ ನಿರ್ಣಯಿಸಲಾಯಿತು.
ಉಡುಪಿ ಜನತೆಗೆ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕೈಗೊಂಡ ಈ ಐತಿಹಾಸಿಕ ನಿರ್ಣಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಉಡುಪಿ ಜನತೆಯ ಪರವಾಗಿ ಶಾಸಕ ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.
Comments are closed.