ಬೆಳಗಾವಿ: ಚೀನಾ ಸೇರಿದಂತೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಕೋವಿಡ್ ನಿರ್ವಹಣೆ ಕುರಿತ ಸಭೆ ಬಳಿಕ ಅವರು ಮಾತನಾಡಿದರು. ಈಗಾಗಲೇ 2-3 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಇದರ ಜೊತೆಗೆ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಒಳಾಂಗಣ ಸ್ಥಳ, ಎಸಿ ಇರುವ ಕಡೆಗಳಲ್ಲಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗುವುದು. ವಿದೇಶದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಈಗಾಗಲೇ ವಿಮಾನ ನಿಲ್ದಾಣದಲ್ಲಿ ಕೆಲವರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದರು.
ಬಹುತೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳನ್ನು ಅಳವಡಿಸಲಾಗಿದೆ. ಇವುಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಸಿದ್ಧತೆ ಕೈಗೊಳ್ಳಲು ಸೂಚಿಸಲಾಗುವುದು. ಜಿಲ್ಲಾಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಕೋವಿಡ್‌ಗೆ ಮೀಸಲಿಡಲು ಹಾಗೂ ಖಾಸಗಿ ಆಸ್ಪತ್ರೆಯಲ್ಲೂ ಹಾಸಿಗೆ ಮೀಸಲಿಡಲು ಸೂಚಿಸಲಾಗುವುದು, ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಭೆ ನಡೆಯುತ್ತಿದ್ದು, ಅಲ್ಲಿಂದ ನೀಡುವ ಮಾರ್ಗಸೂಚಿಯನ್ನು ಗಮನಿಸಿ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.
ಕೋವಿಡ್ ಲಸಿಕೆಯಿಂದ ಅಪಾಯವಾಗುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ದಾಖಲೆ ಇಲ್ಲ. ಲಸಿಕೆ ಪಡೆದು ನಮ್ಮನ್ನು ನಾವು ಕೋವಿಡ್‌ನಿಂದ ರಕ್ಷಿಸಿಕೊಳ್ಳಬಹುದು. ಹಾಗೆಯೇ ಮಾಸ್ಕ್ ಕೂಡ ಧರಿಸಬೇಕು. ರೂಪಾಂತರಿ ವೈರಾಣು ಯಾವುದೇ ಪರಿಣಾಮ ಬೀರದಂತೆ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಸಚಿವರು ಕೋರಿದರು.
Comments are closed.