ಕರಾವಳಿ

ಮಂಗಳೂರು : ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Pinterest LinkedIn Tumblr

ಮಂಗಳೂರು, ಮೇ 26: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ನಾಲ್ಕು ವರ್ಷ ಪೂರೈಸಿದ ಸಂಭ್ರಮದಲ್ಲಿದ್ದರೆ, ಮಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆದಿದೆ.

ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ದೇಶದಾದ್ಯಂತ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಮಂಗಳೂರಿನಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ನ ಮಹಿಳಾ ಘಟಕದ ಅಧ್ಯಕ್ಷೆ ಶ್ಯಾಲೆಟ್ ಪಿಂಟೋ ನೇತೃತ್ವದಲ್ಲಿ ಶನಿವಾರ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಹಾಗೂ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ತೈಲ ಬೆಲೆಯೇರಿಕೆ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಭಿತ್ತಿಪತ್ರಗಳನ್ನು ಹಿಡಿದು ಮೋದಿ ಸರಕಾರಕ್ಕೆ ಧಿಕ್ಕಾರ ಕೂಗಿದರು.

ಕೇಂದ್ರ ಸರಕಾರದ ಜನ ವಿರೋಧಿ ನೀತಿಯಿಂದಾಗಿ ದೇಶದಲ್ಲಿ ಆಹಾರ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ಅಚ್ಛೇ ದಿನ್ ಗಳ ಬಣ್ಣ ಬಣ್ಣದ ಕನಸು ತೋರಿಸಿ ಮೋದಿ ಅಧಿಕಾರದ ಗದ್ದುಗೆ ಏರಿದರು. ಕಳೆದ ನಾಲ್ಕು ವರ್ಷದಲ್ಲಿ ಅಚ್ಛೇ ದಿನ್ ಯಾರಿಗೆ ಬಂದಿದೆ ಎಂದು ಮೋದಿ ಸ್ಪಷ್ಟ ಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಯು.ಟಿ.ಖಾದರ್, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಸುರೇಶ್ ಬಳ್ಳಾಲ್, ಮಮತಾ ಗಟ್ಟಿ, ಸಬಿತಾ ಮಿಸ್ಕಿತ್, ಗ್ರೆಟ್ಟಾ ರೆಬೆಲ್ಲೋ ಸೇರಿದಂತೆ ಹಲವಾರು ಮಹಿಳಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

Comments are closed.