ಕರಾವಳಿ

ಮಂಗಳೂರು ಸಿಸಿಬಿ ಕಾರ್ಯಾಚರಣೆ : ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಸೊತ್ತು ಸಮೇತಾ ಬಂಧನ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್. 28: ನಗರದಲ್ಲಿ ಸಾರ್ವಜನಿಕವಾಗಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (Methylene dioxy methamphetamine) ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಸುರತ್ಕಲ್ ಸಮೀಪದ ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ಶಾಫಿ (32) ಎಂದು ಗುರುತಿಸಲಾಗಿದೆ.

ಬಂಧಿತನಿಂದ ಸುಮಾರು 3.15 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕದ ಯಂತ್ರ ಹಾಗೂ ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 3,20,500 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯು ಮುಂಬೈಯಿಂದ ಈ ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ಮಂಗಳೂರು ನಗರದಲ್ಲಿ ಹಲವು ವ್ಯಕ್ತಿಗಳಿಗೆ ಈ ಮಾದಕ ವಸ್ತುವನ್ನು ಮಾರಾಟ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ನಿರ್ದೇಶನದಂತೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್‌ಸುಂದರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Comments are closed.