ಕರಾವಳಿ

ಮಂದಿರ,ಮಸೀದಿ,ಚರ್ಚ್‌ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ

Pinterest LinkedIn Tumblr

ಮಂಗಳೂರು, ಮಾರ್ಚ್ 26:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ನಾಮಪತ್ರ ಸಲ್ಲಿಸುವ ಮುನ್ನ ವಿವಿಧ ದೇವಸ್ಥಾನ, ಚರ್ಚ್, ದರ್ಗಾಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸೋಮವಾರ ಬೆಳಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕ್ಷೇತ್ರದಲ್ಲಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರ ಆಶೀರ್ವಾದ ಪಡೆದರು. ತದನಂತರ ಶ್ರೀ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮಂಗಳೂರಿನ ಮರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು.ಅ ಬಳಿಕ ತನ್ನ ತರವಾಡು ಮನೆಗೆ ತೆರಳಿ ಗೋ ಪೂಜೆ ಸಲ್ಲಿಸಿದರು. ಬಳಿಕ ಮಂಗಳೂರು ತಾಲೂಕಿನ ಪಾವೂರು ಗ್ರಾಮದ ಕೊಪ್ಪರಿಗೆಯ ತನ್ನ ತಾಯಿ ಮನೆಯ ದೈವ ದೇವರಿಗೆ ಪೂಜೆ ಸಲ್ಲಿಸಿದರು.

ಬಳಿಕ ಉಳ್ಳಾಲ ಸೆಬಾಸ್ಟಿಯನ್ ಚರ್ಚ್ ಗೆ ಭೇಟಿ ನೀಡಿ ದೇವರ ಹಾಗೂ ಗುರುಗಳ ಆಶಿರ್ವಾದವನ್ನು ಪಡೆದ ಮಿಥುನ್ ರೈ, ಬಳಿಕ ಸಮೀಪದ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಆ ನಂತರ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಮಧ್ಯಾಹ್ನ ಬೃಹತ್ ಸಂಖ್ಯೆಯ ತಮ್ಮ ಬೆಂಬಲಿಗರ ಜೊತೆ ನಗರದ ಪುರಭವನಕ್ಕೆ ಆಗಮಿಸಿದ ಮಿಥುನ್ ರೈ ಪುರಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಅಲ್ಲಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾರ್ಯಕರ್ತರ ಜೊತೆ ಪಾದಯಾತ್ರೆಯಲ್ಲಿ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ನಗರದ ಖ್ಯಾತ ವೈದ್ಯ ಡಾ.ಮಹಾಬಲ ರೈ ಅವರ ಪುತ್ರ ಬಿಬಿಎಂ ಪದವೀಧರ ಮಿಥುನ್ ರೈ ಮೊದಲ ಭಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಘಟಾನುಘಟಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ನಡುವೆ ಪಕ್ಷದ ಹೈಕಮಾಂಡ್ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ.

Comments are closed.