ಕರಾವಳಿ

ಜಿಲ್ಲೆಯ ವಿವಿಧೆಡೆಗಳಲ್ಲಿ ಜಾನುವಾರು ಕಳವು ; ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶ

Pinterest LinkedIn Tumblr

ಮಂಗಳೂರು : ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಸಬಾ ಬೆಂಗ್ರೆ ನಿವಾಸಿ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್(31) ಎಂದು ಗುರುತಿಸಲಾಗಿದೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ರೌಡಿ ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಕಸಬಾ ಬೆಂಗ್ರೆ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ವಿವಿಧ ಠಾಣೆಯಲ್ಲಿ ಸುಮಾರು ೧೪ ಪ್ರಕರಣಗಳು ದಾಖಲಾಗಿವೆ. ಮಂಗಳೂರು ನಗರ ಉಳ್ಳಾಲ, ಕಂಕನಾಡಿ, ಬಜ್ಪೆ, ಪಣಂಬೂರು, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಜಾನುವಾರು ಕಳವು ಪ್ರಕರಣಗಳು ದಾಖಲಾಗಿವೆ. ಮಂಗಳೂರು ಉತ್ತರ, ಉಪ್ಪಿನಂಗಡಿ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿವೆ. ಮಂಗಳೂರು ನಗರದ ಪಾಂಡೇಶ್ವರ ದೇವಸ್ಥಾನದ ದನ ಕಳವು ಪ್ರಕರಣದಲ್ಲಿ ಈತ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಮಂಗಳೂರು ಉತ್ತರ, ಮಂಗಳೂರು ಪೂರ್ವ ಠಾಣೆಗಳಲ್ಲಿನ ಕಳವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿತ್ತು. ಆರೋಪಿಯನ್ನು ಕಸಬಾ ಬೆಂಗ್ರೆಯಿಂದ ವಶಕ್ಕೆ ಪಡೆದು ಉಳ್ಳಾಲ ಠಾಣೆಗೆ ಹಸ್ತಾಂತರಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳದ ಎಸಿಪಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Comments are closed.