ಮಂಗಳೂರು, ಜುಲೈ.11 ಕರಾವಳಿಯಲ್ಲಿ ದುರ್ಬಲವಾಗಿದ್ದ ಮುಂಗಾರು ಚುರುಕುಗೊಂಡಿದ್ದು, ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಕರಾವಳಿಯ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ.
ದ.ಕ. ಜಿಲ್ಲಾದ್ಯಂತ ಮುಂಗಾರು ಮಳೆ ಬಿರುಸು ಪಡೆದಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಗರದ ತಗ್ಗುಪ್ರದೇಶಗಳು ಜಲಾವೃತಗೊಂಡಿದೆ. ಕೊಟ್ಟಾರ ಚೌಕಿಯಲ್ಲಿ ರಾಜಕಾಲುವೆಗಳು ತುಂಬಿ ಸಮೀಪದ ಮನೆಗಳಿಗೆ ನೀರು ನುಗ್ಗಿದೆ.
ಕರಾವಳಿಯ ನಾನಾ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಜೋರಾದ ಗಾಳಿ-ಮಳೆ ಸುರಿಯುತ್ತಿದೆ ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲೂ ಮುಂಗಾರು ಮಳೆ ಅಬ್ಬರ ಪಡೆದಿದ್ದು, ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಚುರುಕು ಪಡೆದಿದೆ. ಜಿಲ್ಲೆಯ ಜೀವನಾಡಿಯಾದ ನೇತ್ರಾವತಿ ಮತ್ತು ಕುಮಾರಾಧಾರಾ ತುಂಬಿ ಹರಿಯುತ್ತಿದೆ.
ಕರಾವಳಿಯಲ್ಲಿ ಸತತ ಮೂರು ದಿನಗಳಿಂದ ಧಾರಾಕರವಾಗಿ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ಸಮುದ್ರದ ಭೋರ್ಗರೆತ ಭೀತಿ ಹುಟ್ಟಿಸುವಂತಿದೆ. ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುತ್ತಿದೆ. ಭಾರೀ ಗಾಳಿ-ಮಳೆಗೆ ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತ್ತಿದೆ. ಪಣಂಬೂರು, ತಣ್ಣೀರು ಬಾವಿ, ಉಳ್ಳಾಲ ಹಾಗೂ ಸೋಮೇಶ್ವರ ಬೀಚ್‌ಗಳಲ್ಲಿ ಅಲೆಗಳ ಅಬ್ಬರ ಜೋರಾಗಿದೆ.ಭಾರೀ ಮಳೆಯಾಗುತ್ತಿರುವ ಹಿನ್ನಲೆ ಬೀಚ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾದ ಪರಿಣಾಮ, ಕರಾವಳಿ ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Comments are closed.