ಮಂಗಳೂರು / ಪುತ್ತೂರು : ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಶುಕ್ರವಾರ ಮಂಗಳೂರು— ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಧರ್ಮಸ್ಥಳ ಠಾಣಾ ವ್ಯಾಪ್ತಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಯೆಂಜೀರ ರೆಖ್ಯ (ಮಂಗಳೂರು— ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75) ಸಮೀಪದ ತಿರುವಿನಲ್ಲಿ ಇಂದು ಬೆಳಗ್ಗೆ ೧೧ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ.
ಈ ವೇಳೆ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ತೆರವುಕಾರ್ಯ ನಡೆಸಿದ್ದಾರೆ. ಇದೇ ವೇಳೆ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯವಾಗಿ ಗುಂಡ್ಯ ಹಾಗೂ ಇಚಿಲಂಪಾಡಿ, – ಮರ್ಧಾಳ, – ಉಪ್ಪಿನಂಗಡಿ ಮಾರ್ಗಗಳನ್ನು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳಲು ಪರ್ಯಾಯ ಮಾರ್ಗವಾಗಿ ಗುಂಡ್ಯ – ಸುಬ್ರಮಣ್ಯ – ಕಡಬ – ಉಪ್ಪಿನಂಗಡಿ ಮಾರ್ಗ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಉಪ್ಪಿನಂಗಡಿ – ಸುಬ್ರಹ್ಮಣ್ಯ ಕ್ರಾಸ್ – ಕಡಬ – ಸುಬ್ರಮಣ್ಯ – ಗುಂಡ್ಯ ಮಾರ್ಗವನ್ನು ಬಳಸುವಂತೆ ಸೂಚನೆ ನೀಡಲಾಗಿದೆ.
ಉರುಳಿ ಬಿದ್ದ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪರಿಸರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಟ್ಯಾಂಕರ್ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆದಿದೆ.
Comments are closed.