ಮಂಗಳೂರು, ಆಗಸ್ಟ್.06: ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯಿಂದ ಮತ್ತೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿರುವ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇದೀಗ ನಾಳೆ (ಆಗಸ್ಟ್.07) ಶಾಲೆ- ಕಾಲೇಜುಗಳಿಗೆ (ಪದವಿ ತರಗತಿವರೆಗೆ) ರಜೆ ಘೋಷಿಸಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮತ್ತೆ ಮಳೆ ಬಿರುಸಾಗಿದೆ .ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಡಲತೀರದಲ್ಲಿ ಕಡಲ್ಕೊರೆತ ಉಂಟಾಗುವ ಸಾಧ್ಯತೆ ಇದ್ದು, ಕಡಲ ತೀರವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹಾಗೂ ಮೀನುಗಾರರು ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಲು ಸದಾ ಜಾಗೃತರಾಗಿದ್ದು, ದೂರುಗಳಿಗೆ ಸ್ಪಂದಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ತಗ್ಗು ಇರುವ ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸುವಂತೆ ತಿಳಿಸಿರುವ ಜಿಲ್ಲಾಧಿಕಾರಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿ ವಹಿಸುವಂತೆ ಸೂಚಿಸಿದ್ದಾರೆ.
Comments are closed.