ಮಂಗಳೂರು:ಡಿಸೆಂಬರ್, 18: ಸಿಎಎಗೆ ಸಂಬಂಧಿಸಿದಂತೆ ಹಲವಾರು ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ಈ ಸಂದರ್ಭ ನಗರದಲ್ಲಿ ಯಾವೂದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಮಂಗಳೂರಿನಲ್ಲಿ ಡಿಸೆಂಬರ್.18ರ ರಾತ್ರಿ 9ರಿಂದ ಡಿ.20ರ ರಾತ್ರಿ 12ರವರೆಗೆ ಸೆ.144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ. ಪಿಎಸ್ ಹರ್ಷ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಯಾವುದೇ ಪಕ್ಷ, ಸಂಘಟನೆಗಳ ಪ್ರತಿಭಟನೆಗಳಿಗೆ ಅವಕಾಶವಿಲ್ಲ.ಡಿ.18ರ ರಾತ್ರಿ 9 ಗಂಟೆಯಿಂದ ಮಂಗಳೂರಿನಲ್ಲಿ ನಿಷೇಧಾಜ್ಞೆ ಹೊರಡಿಸಿರುವ ಹಿನ್ನೆಲೆಯಲ್ಲಿ ಸೆಕ್ಷನ್144 ಜಾರಿಯಲ್ಲಿರುವ ಅವಧಿಯಲ್ಲಿ ಆಯುಕ್ತಾಲಯ ವ್ಯಾಪ್ತಿಯಲ್ಲಿ ಪ್ರತಿಭಟನಾ ಸಭೆಗಳಿಗೆ ಅವಕಾಶವಿಲ್ಲ ಎಂದವರು ತಿಳಿಸಿದ್ದಾರೆ.
ಈ ಮಧ್ಯೆ ಎಸ್ಕೆಎಸ್ಸೆಸ್ಸೆಫ್ ಸಂಘಟನೆಯ ವತಿಯಿಂದ ಡಿ.19ರಂದು ಮಧ್ಯಾಹ್ನ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಲಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಆಯುಕ್ತರು ನಿಷೇಧಾಜ್ಞೆ ಇದ್ದರೂ ಪ್ರತಿಭಟನೆ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವವರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ನಿಷೇಧಾಜ್ಞೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಎಸ್ಕೆಎಸ್ಸೆಸ್ಸೆಫ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
Comments are closed.