ಮಂಗಳೂರು, ಡಿಸೆಂಬರ್. 19 : ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಇದ್ದರೂ..ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿಷೇಧಾಜ್ಞೆ ಉಲ್ಲಂಘಿಸಿ ನಗರದ ಸ್ಟೇಟ್ ಬ್ಯಾಂಕ್ ಬಳಿಯಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆಯಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಸಿಡಿಸಿ ಹಲವರನ್ನುಬಂಧಿಸಿರುವ ಘಟನೆ ಗುರುವಾರ ನಡೆದಿದೆ.
ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುವ ಬಗ್ಗೆ ಮುನ್ಶೂಚನೆ ಲಭಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಡುವೆ ಎಸ್ಕೆಎಸ್ಸೆಸ್ಸೆಫ್ ಸಂಘಟನೆಯು ಪ್ರತಿಭಟನೆ ನಡೆಸುವ ಸುಳಿವು ಪೊಲೀಸರಿಗೆ ದೊರಕಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಂದೋಬಸ್ತ್ ಕಲ್ಪಿಸಿದ್ದರು.
ಆದರೆ ಸ್ಟೇಟ್ ಬ್ಯಾಂಕ್ ಬಳಿಯ ಸಿಟಿ ಬಸ್ ನಿಲ್ದಾಣದ ಸಮೀಪ ಕೆಲವರು ಗುಂಪು ಜಮಾಯಿಸಿ ಘೋಷಣೆ ಕೂಗತೊಡಗಿದರು. ಬಳಿಕ ಜೋರಾಗಿ ಘೋಷಣೆ ಕೂಗಿಕೊಂಡು ಜಿಲ್ಲಾಧಿಕಾರಿ ಕಚೇರಿ ಬಳಿ ಬರಲು ಯತ್ನಿಸುತ್ತಿದ್ದಂತೆ ಪೊಲೀಸರು ಲಘು ಲಾಠಿಚಾರ್ಜ್ ಮಾಡಿ ಗುಂಪನ್ನು ಚದುರಿಸಲು ಯತ್ನಿಸಿದರು.
ಪ್ರತಿಭಟನೆ ತೀವ್ರರೂಪ ಪಡೆಯುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಬಳಿ ಬಸ್ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಿಂದ ಆತಂಕಗೊಂಡಿರುವ ಪರಿಸರದ ಅಂಗಡಿಮುಂಗಟ್ಟುಗಳ ಮಾಲಕರು ಸ್ವಯಂಪ್ರೇರಿತವಾಗಿ ಅಂಗಡಿಮುಂಗಟ್ಟುಗಳಿಗೆ ಬೀಗ ಜಡಿದಿದ್ದಾರೆ.
Comments are closed.