ಕರಾವಳಿ

ಕೊರೊನಾ ನಿಯಂತ್ರಣಕ್ಕೆ ಸ್ವಯಂ ನಿಗಾ ಅನಿವಾರ್ಯ : ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್

Pinterest LinkedIn Tumblr

ಮಂಗಳೂರು: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಸ್ವಯಂ ನಿಗಾ ಅಳವಡಿಸಿ ಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊರೊನಾ ವೈರಾಣು ಅತಿ ವೇಗವಾಗಿ ಹಬ್ಬುತ್ತದೆ. ಇದಕ್ಕೆ ತಕ್ಕ ಜನಸಾಮಾನ್ಯರು ಮುನ್ನೆಚ್ಚರಿಕೆ ವಹಿಸಿ ಸಾಧ್ಯವಾದಷ್ಟು ಮಟ್ಟಿಗೆ ನಿಯಂತ್ರಣ ಹೇರಬೇಕು. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು. ಕಚೇರಿ ಸಿಬ್ಬಂದಿಗಳು ಸಾಧ್ಯವಾದಷ್ಟು ಮಟ್ಟಿಗೆ ಮನೆಯಲ್ಲೇ ಕೆಲಸ ಮಾಡಲು ಪ್ರಯತ್ನಿಸಬೇಕು. ಕೆಲವೊಂದು ಕಟ್ಟುನಿಟ್ಟು ಅನಿವಾರ್ಯವಾದ್ದರಿಂದ ಕೆಲವು ಸೇವೆಗಳು ವ್ಯತ್ಯಯವಾಗಬಹುದು. ಆದರೂ ಅನಿವಾರ್ಯವಾಗಿ ಎಲ್ಲರೂ ಆಡಳಿತದ ಜತೆಯಲ್ಲಿ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲದಿದ್ದರೂ ಸೂಕ್ತ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಪಾಸಿಟಿವ್ ಪ್ರಕರಣಗಳು ಪತ್ತೆಯಾದರೆ ಕೂಡಲೆ ಮೆಡಿಕಲ್ ಕಾಲೇಜುಗಳಿಗೆ ನೀಡಲಾದ ಆದೇಶವನ್ನು ಕಾರ್ಯರೂಪಕ್ಕೆ ತರಲಾಗುವುದು. ಈಗಾಗಲೇ ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಕೊರೋನಾ ಪ್ರಕರಣಗಳ ನಿರ್ವಹಣೆ ಕುರಿತಂತೆ ಸೂಕ್ತ ತರಬೇತಿಯನ್ನೂ ನೀಡಲಾಗಿದೆ ಎಂದು ಅವರು ಹೇಳಿದರು.

ಕೊರೊನಾ ಚಿಕಿತ್ಸೆಗೆ ಇಎಸ್‍ಐ ಆಸ್ಪತ್ರೆ:

ಮಂಗಳೂರಿನಲ್ಲಿರುವ ಇಎಸ್‍ಐ ಆಸ್ಪತ್ರೆಯನ್ನು ಕೊರೋನಾ ಚಿಕಿತ್ಸೆಗಾಗಿ ಮೀಸಲಿರಿಸಲಾಗಿದೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಬೆಡ್‍ಗಳ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಆಯುಷ್ ಆಸ್ಪತ್ರೆಯಲ್ಲೂ 10 ಬೆಡ್‍ಗಳ ಪ್ರತ್ಯೇಕ ವಾರ್ಡ್ ಮಾಡಲಾಗುತ್ತಿದೆ. ಮುಂದಿನ ದಿನಗಳ ಅಗತ್ಯ ಬಿದ್ದರೆ ಇತರ ಕಟ್ಟಡಗಳಲ್ಲೂ ಚಿಕಿತ್ಸೆ ಕೇಂದ್ರಗಳನ್ನು ಆರಂಭಿಸುವ ಚಿಂತನೆಯಿದೆ. ಅದಕ್ಕಾಗಿ ಕೆಲವು ಕಟ್ಟಡಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಂವಾದದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಉಪಸ್ಥಿತರಿದ್ದರು.

Comments are closed.