ಕರಾವಳಿ

ಕೋವಿಡ್ ರೋಗಿಗಳಿಗೆ ಕೆಲವು ಆಸ್ಪತ್ರೆಗಳಲ್ಲಿ ಅಧಿಕ ಬಿಲ್ ಆರೋಪ : ಕೇಸು ದಾಖಲಿಸಲು ಸಂಸದ ನಳಿನ್ ಸೂಚನೆ

Pinterest LinkedIn Tumblr

ಮಂಗಳೂರು : ಜಿಲ್ಲೆಯ ಕೆಲವು ಆಸ್ಪತ್ರೆಗಳಲ್ಲಿ ಸರಕಾರ ನಿಗದಿಪಡಿಸಿದ ಚಿಕಿತ್ಸಾ ದರವನ್ನು ಮೀರಿ ಭಾರೀ ಮೊತ್ತದ ಬಿಲ್ಲನ್ನು ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದ್ದು, ಅಂತಹ ಆಸ್ಪತ್ರೆಗಳ ವಿರುದ್ಧ ಕೇಸು ದಾಖಲಿಸುವಂತೆ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ನಗರದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತ್ರತ್ವದಲ್ಲಿ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಹಾಗೂ ಸಾಮರ್ಥ್ಯವನ್ನು ಪರಿಶೀಲಿಸಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

ಕೋವಿಡ್ ಚಿಕಿತ್ಸೆಗೆ ಸರಕಾರ ನಿಗದಿಪಡಿಸಿದ ದರಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ರೋಗಿಯ ತುರ್ತು ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಇದ್ದಲ್ಲಿ, ಕೋವಿಡ್ ವರದಿಗೆ ಕಾಯದೆ, ಶಸ್ತ್ರಚಿಕಿತ್ಸೆ ಮಾಡುವಂತೆ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸರಕಾರಿ ದರದಲ್ಲಿ ದೊರಕುವ ಕೋವಿಡ್ ಚಿಕಿತ್ಸೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅಲ್ಲದೇ, ರೋಗಿಗಳ ಅಹವಾಲಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ತಿಳಿಸದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರತ್ನಾಕರ್, ವೆನ್‍ಲಾಕ್ ಅಧೀಕ್ಷಕ ಡಾ. ಸದಾಶಿವ, ಕೆಎಂಸಿ ಆಸ್ಪತ್ರೆ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.