ಉಡುಪಿ: ಮಧ್ಯರಾತ್ರಿ ವೇಳೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಣಿಪಾಲ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪರ್ಕಳ ನಿವಾಸಿ ವಿವೇಕಾನಂದ ಕಾಮತ್(27) ಮತ್ತು ಧನಂಜಯ (26)ಎಂದು ಗುರುತಿಸಲಾಗಿದೆ.
ಮಾರ್ಚ್ 12 ರಂದು ರಾತ್ರಿ 1:30 ಗಂಟೆ ಸಮಯಕ್ಕೆ ಮಣಿಪಾಲದ ಈಶ್ವರ ನಗರದ ಬಳಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಣಿಪಾಲ ಕಾಲೇಜಿನ ಓರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಇಬ್ಬರು ಯುವಕರು ಅಡ್ಡಗಟ್ಟಿ ನಿಲ್ಲಿಸಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು ಸದರಿ ವಿಷಯವನ್ನು ವಿದ್ಯಾರ್ಥಿನಿಯು ಕೂಡಲೇ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಣಿಪಾಲ ಪೊಲಿಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಬಗ್ಗೆ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಪ್ರತಿಕ್ರಿಯಿಸಿ, ಮಣಿಪಾಲದಲ್ಲಿನ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಹಾಗೂ ಸಾರ್ವಜನಿಕರಿಗೆ ರಾತ್ರಿ ವೇಳೆಯಲ್ಲಿ ತಿರುಗಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಹಾಗೂ ಇಂಥಹ ಕೃತ್ಯವನ್ನು ಎಸಗುವವರು ಯಾರೇ ಆಗಿದ್ದರೂ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Comments are closed.