ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಅಸ್ಥಿ ಪಂಜರ ಪತ್ತೆಯಾಗದ ಘಟನೆ ಮೂರ್ನಾಲ್ಕು ದಿನದ ಹಿಂದೆ ನಡೆದಿದ್ದು ಈ ಪ್ರಕರಣ ತಿರುವು ಪಡೆದಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಸಾಗರ ತಾಲೂಕಿನ ಆಚಾಪುರ ಗ್ರಾಮದ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದ್ದು, ವಿನೋದ್ ಅವರನ್ನು ಕೊಲೆಗೈದು ನಂತರ ಕಾಡಿನಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯತ್ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್ ಅವರ ಪತ್ನಿ, ಇಬ್ಬರು ಪುತ್ರರು, ಪತ್ನಿಯ ಅಕ್ಕನ ಮಗ ಮತ್ತು ಮೃತರ ತಮ್ಮನ ಕೈವಾಡ ಇರುವುದು ತಿಳಿದು ಬಂದಿತ್ತು.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿನೋದ್ ಅವರ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ಇದೆ ಆಧಾರದಲ್ಲಿ ತನಿಖೆ ನಡೆಸಿದಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸೆ. 25ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆ. 26ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್’ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು. ಸೆ.26ರಂದು ರಾತ್ರಿ 8.30ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ಸುತ್ತಿಗೆ, ಕಬ್ಬಿಣದ ರಾಡ್ ನಿಂದ ಹೊಡೆದು ವಿನೋದ್ ಅವರ ಕೊಲೆ ಮಾಡಲಾಗಿದೆ. ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಅವರ ಮೃತದೇಹವನ್ನು ಸಾಗಿಸಲಾಗಿದೆ.
ತನಿಖೆ ವೇಳೆ ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಆರೋಪಿಗಳು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿ, ಮನೆಯಲ್ಲೇ ಮೊಬೈಲ್’ಗಳನ್ನು ಇಟ್ಟು ಹೋಗಿದ್ದರು. ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ. ಚಾಲಕನ ಸೀಟಿನಲ್ಲಿ ಮೃತದೇವನ್ನು ಇರಿಸಿ ಮೊದಲೇ ಖರೀದಿಸಿಟ್ಟಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು. ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಕೊಲೆ ಮಾಡಿದ್ದ ಜಾಗವನ್ನು ಫಿನಾಯಲ್ ಬಳಸಿ ಸ್ವಚ್ಛಗೊಳಿಸಿದ್ದರು. ಇದಿಷ್ಟೆ ಅಲ್ಲ, ಕೃತ್ಯದ ವೇಳೆ ಆರೋಪಿಗಳು ಬಳಸಿದ್ದ ಬಟ್ಟೆ, ಚಪ್ಪಲಿಗಳನ್ನು ಮನೆಯ ಹಿಂಭಾಗದಲ್ಲಿ ಸುಟ್ಟು ಹಾಕಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.
Comments are closed.