ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪನವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ನಿಯೋಗ ಇಂದು (ಏ.13 ಬುಧವಾರ) ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಾವು ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅವರ ಬಂಧನವಾಗಬೇಕು ಹಾಗೂ ಸಂತೋಷ್ ಪಾಟೀಲ್ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದರು.
ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಪ್ರಿಯಾಂಕ ಖರ್ಗೆ , ಕೆಜೆ ಜಾರ್ಜ್ ಸೇರಿದಂತೆ 20 ನಾಯಕರ ನಿಯೋಗ ರಾಜಭವನಕ್ಕೆ ಭೇಟಿಕೊಟ್ಟು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದೆ.
ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಕಮಿಷನ್ ಬಗ್ಗೆ ಚರ್ಚೆಗೆ ಮನವಿಮಾಡಿದ್ದೆವು. ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಆಗ ಚರ್ಚೆಗೆ ಅವಕಾಶ ನೀಡಿದ್ದರೆ ಇಂದು ಆತ್ಮಹತ್ಯೆ ಆಗ್ತಿರಲಿಲ್ಲ. ಗುತ್ತಿಗೆದಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಪಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭ್ರಷ್ಟಾಚಾರದ ಬಗ್ಗೆಯೂ ತನಿಖೆಯಾಗಬೇಕು. ಈ ಹೋರಾಟವನ್ನು ಕಾಂಗ್ರೆಸ್ ಪಕ್ಷ ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಜನರ ಪರವಾಗಿ ನಾವು ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ
Comments are closed.