ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ತನಿಖೆ ನಡೆಸಲು ಜಿಲ್ಲಾ ಪೊಲೀಸರು ಎರಡು ತಂಡಗಳನ್ನು ರಚಿಸಿದ್ದಾರೆ. ಮಲ್ಪೆ ಮತ್ತು ಬ್ರಹ್ಮಾವರ ವೃತ್ತ ನಿರೀಕ್ಷಕರು ಈ ತಂಡಗಳ ನೇತೃತ್ವ ವಹಿಸಿದ್ದಾರೆ.
ಒಂದು ತಂಡ ಬೆಳಗಾವಿಗೆ ತೆರಳಿದ್ದು, ಮೃತ ಸಂತೋಷ್ ಪಾಟೀಲ್ ಗೆ ಸಂಬಂಧಿಸಿದ ಮಾಹಿತಿ ಕಲೆಹಾಕುತ್ತಿದೆ. ಉಡುಪಿಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಮೃತ ಸಂತೋಷ್ ಪಾಟೀಲ್ ಸ್ನೇಹಿತರಾದ ಪ್ರಶಾಂತ್ ಶೆಟ್ಟಿ ಹಾಗೂ ಸಂತೋಷ್ ಮಡಿಕೇರಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿ ಅವರ ಹೇಳಿಕೆಗಳನ್ನು ವಿಡಿಯೋ ದಾಖಲಿಸಿಕೊಂಡಿದ್ದಾರೆ.
ಇನ್ನು ಪೊಲೀಸರು ಲಾಡ್ಜ್‌ನ ಸಿಸಿಟಿವಿ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದು, ಮೊಬೈಲ್ ಕರೆಗಳು ಮತ್ತು ವಾಟ್ಸಾಪ್ ಸಂದೇಶಗಳ ಬಗ್ಗೆ ಆಳವಾದ ತನಿಖೆ ನಡೆಸಲಾಗುತ್ತಿದೆ. ಮಣಿಪಾಲ ಮತ್ತು ಮಂಗಳೂರಿನ ಎರಡು ಪ್ರತ್ಯೇಕ ಎಫ್‌ಎಸ್‌ಐಎಲ್ ತಂಡಗಳು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿವೆ.
ಈ ಪ್ರಕರಣದ ಪ್ರಮುಖದಲ್ಲಿ ಕೇಳಿಬಂದಿರುವ ಹೆಸರು ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಕಾರಣ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.
Comments are closed.