ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ (ಒಡನಾಡಿ) ಸದಸ್ಯರ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ.
ಕೋರ್ಟ್‍ನ ಮಾರ್ಗದರ್ಶನದಂತೆ ಇದೀಗ ಎಫ್‍ಐಆರ್ ಪ್ರತಿಯನ್ನು ಚಿತ್ರದುರ್ಗದ ಎಸ್ಪಿಗೆ ಕಳುಹಿಸಲಾಗಿದೆ. ಸ್ವಾಮೀಜಿಯ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ (ಪೋಕ್ಸೊ) ಅಡಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ಎರಡನೇ ಆರೋಪಿಯಾಗಿದ್ದಾರೆ.
ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಸ್ವಾಮೀಜಿ ಬಳಿಗೆ ಹೋಗಲು ಒಪ್ಪದಿದ್ದರೆ ಹಾಸ್ಟೆಲ್ ಸಿಬ್ಬಂದಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದರು. ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು ಮತ್ತು ಸಿಹಿಯಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದು ದೂರಲಾಗಿದೆ. ಕಿರುಕುಳ ಪ್ರಶ್ನಿಸಿದ ಕಾರಣ ಹಾಸ್ಟೆಲ್‍ನಿಂದ ಹೊರ ಹಾಕಲಾಗುತ್ತಿತ್ತು ಎಂದು ನೊಂದ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.
Comments are closed.