ಕರಾವಳಿ

ಗಂಗೊಳ್ಳಿ ಜೆಟ್ಟಿ ಕುಸಿತ ಪ್ರಕರಣದ ಸಮಗ್ರ ತನಿಖೆ ನಡೆಸಿ ಇಂಜಿನಿಯರ್, ಗುತ್ತಿಗೆದಾರರ ಮೇಲೆ ಕ್ರಮ: ಸಚಿವ ಎಸ್. ಅಂಗಾರ

Pinterest LinkedIn Tumblr

ಕುಂದಾಪುರ: ಗಂಗೊಳ್ಳಿಯ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣವನ್ನು ತನಿಖಾ ಸಂಸ್ಥೆಯಿಂದ ನಿಸ್ಪಕ್ಷಪಾತ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಗುತ್ತಿಗೆದಾರರು ಗಮನಹರಿಸಬೇಕಿದ್ದು, ಕಳಪೆ ಕಾಮಗಾರಿ ನಡೆಸಿದ್ದು ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್.ಅಂಗಾರ ಹೇಳಿದರು.

ಅವರು ಗುರುವಾರ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿದ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

ಜೆಟ್ಟಿ ಕುಸಿತದಿಂದ ಮೀನುಗಾರಿಕೆಗೆ ತೊಂದರೆಯಾಗದಂತೆ ಆದಷ್ಟು ಶೀಘ್ರ ಜೆಟ್ಟಿ ಪುನರ್ ನಿರ್ಮಾಣ ಮಾಡಲು ಸರಕಾರ ಕ್ರಮಕೈಗೊಳ್ಳಲಿದೆ. ಪುಣೆಯ ಸಿಡಬ್ಲ್ಯುಪಿಆರ್‌ಎಸ್ ಸಂಸ್ಥೆಯ ಬದಲು ಬೆಂಗಳೂರಿನ ಖಾಸಗಿ ಸಂಸ್ಥೆಯವರು ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿಯ ವಿನ್ಯಾಸ ಮಾಡಿದ ಬಗ್ಗೆ ಕೇಳಿ ಬಂದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ವಿವಿಧ ಸಂಸ್ಥೆಗಳು ಬೇರೆ ಬೇರೆ ತಾಂತ್ರಿಕತೆ ಬಗ್ಗೆ ವಿನ್ಯಾಸ ನೀಡುತ್ತಿದ್ದು, ವಿನ್ಯಾಸದಲ್ಲಿ ಲೋಪ ಕಂಡು ಬಂದಲ್ಲಿ ಕ್ರಮಕೈಗೊಂಡು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಲು ಸರಕಾರ ಕ್ರಮ ವಹಿಸಲಿದೆ ಎಂದು ಹೇಳಿದರು.

12 ಕೋ. ರೂ. ವೆಚ್ಚದ ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿಯಲ್ಲಿ 10 ಕೋ. ರೂ. ಬಿಡುಗಡೆ ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಯಾವ ಹಂತದಲ್ಲಿ ಎಷ್ಟೆಷ್ಟು ಹಣ ಬಿಡುಗಡೆ ಮಾಡಿದ್ದಾರೆ ಎಂಬುದರ ಬಗ್ಗೆ ಅಧೀಕೃತ ಮಾಹಿತಿ ಪಡೆದುಕೊಂಡು ಲೋಪವಾಗಿದ್ದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಜೆಟ್ಟಿ ಕುಸಿತವನ್ನು ಲೋಕಾಯುಕ್ತ ತನಿಖೆ ನಡೆಸಬೇಕೆಂಬ ಸ್ಥಳೀಯ ಮೀನುಗಾರರ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೋಮವಾರ ಈ ಬಗ್ಗೆ ಇಲಾಖೆಯ ಉಮ್ಮತ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಅಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಎಂಜಿನಿಯರ್ ಶ್ರೀನಿವಾಸ ಮೂರ್ತಿ, ಮೀನುಗಾರಿಕೆ ಇಲಾಖೆ ಅಪರ ನಿರ್ದೇಶಕ ಪಿ.ನಾಗರಾಜ್, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಾದ ಗಣೇಶ, ಉದಯಕುಮಾರ್, ಸುಮಲತಾ, ದಿವಾಕರ ಖಾರ್ವಿ, ಉಪನಿರ್ದೇಶಕ ಕುಮಾರಸ್ವಾಮಿ, ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮೀನುಗಾರ ಸಂಘಟನೆಗಳ ಮುಖಂಡರು, ಮೀನುಗಾರರು ಉಪಸ್ಥಿತರಿದ್ದರು.

ಮೀನುಗಾರರ ಜೀವನದ ಜೊತೆ ಅಧಿಕಾರಿಗಳ ಚೆಲ್ಲಾಟ..!
ಕಳಪೆ ಕಾಮಗಾರಿಯಿಂದಾಗಿ ಮೀನುಗಾರರು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಇಲ್ಲಿ ಅಪೂರ್ಣ, ಅಸಮರ್ಪಕ ಕಾಮಗಾರಿಯಿಂದಾಗಿ ನಾವು ಭಟ್ಕಳ, ಮಲ್ಪೆಯಲ್ಲಿ ಬೋಟ್ ನಿಲ್ಲಿಸಿ, ಬರಬೇಕಾದ ಅನಿವಾರ್‍ಯತೆಯಿದೆ. ಎಂಜಿನಿಯರ್ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದಲೇ ಈ ಅವಘಢ ಉಂಟಾಗಿದ್ದು, ಇವರು ಮೀನುಗಾರರ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸಚಿವ ಅಂಗಾರ ಅವರೆದುರು ಮೀನುಗಾರರು ಅಸಮಾಧಾನ ಹೊರಹಾಕಿದರು.

ಈಗ ಮಾಡಿರುವ ಕಾಮಗಾರಿಯಲ್ಲಿಯೂ ನಮಗೆ ನಂಬಿಕೆಯಿಲ್ಲ. ಅಲ್ಲಿ ನಿಲ್ಲುವ ಧೈರ್ಯವೂ ಇಲ್ಲ. ಡಿಸೆಂಬರ್ ಒಳಗಾಗಿ ಜೆಟ್ಟಿ ನಿರ್ಮಿಸಿ ಕೊಡಬೇಕು ಎನ್ನುವ ಬೇಡಿಕೆಯನ್ನು ಮೀನುಗಾರ ಮುಖಂಡರಾದ ರಮೇಶ್ ಕುಂದರ್, ರಾಮಪ್ಪ ಖಾರ್ವಿ, ಯಶವಂತ್ ಖಾರ್ವಿ ಮತ್ತಿತರರು ಸಚಿವರ ಮುಂದಿಟ್ಟರು.

 

Comments are closed.