ಬೆಂಗಳೂರು: ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಬಿಎ ಉಮೇಶ್ ಅಲಿಯಾಸ್ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಮರಣದಂಡನೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ. ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠ ಗಲ್ಲು ಶಿಕ್ಷೆ ವಿಳಂಬ ಅಪರಾಧಿ ಯೋಗಕ್ಷೇಮದ ಮೇಲೆ ದುಷ್ಪರಿಣಾಮ ಬೀರಿದೆ. ಹೀಗಾಗಿ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಉಮೇಶ್ ರೆಡ್ಡಿಯನ್ನು ಬೆಳಗಾವಿ ಜೈಲಿನಲ್ಲಿ 10 ವರ್ಷಗಳ ಕಾಲ ಏಕಾಂಗಿಯಾಗಿ ಇರಿಸಲಾಗಿತ್ತು.
ಉಮೇಶ್ ರೆಡ್ಡಿ 1969ರಲ್ಲಿ ಚಿತ್ರದುರ್ಗದಲ್ಲಿ ಜನಿಸಿದ್ದನು. ಸಿಆರ್‌ಪಿಎಫ್‌ಗೆ ಆಯ್ಕೆಯಾಗಿದ್ದ ಉಮೇಶ್ ರೆಡ್ಡಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ್ದನು. ನಂತರ ಪೊಲೀಸ್ ಇಲಾಖೆಗೆ ಸೇರಿದ್ದ ಆತನ ವಿರುದ್ಧ ಬರೋಬ್ಬರಿ 18 ಕೊಲೆ, 20 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು 9 ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ 2007ರಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಇದಾದ ಬಳಿಕ ಉಮೇಶ್ ರೆಡ್ಡಿ ತಾಯಿ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದು ಅದನ್ನು 2013ರಲ್ಲಿ ತಿರಸ್ಕರಿಸಲಾಗಿತ್ತು.
Comments are closed.