ಕರಾವಳಿ

ಪ್ರತಿದಿನ 800ಕ್ಕೂ ಹೆಚ್ಚು ಬೀದಿನಾಯಿಗಳಿಗೆ ಆಹಾರ ನೀಡುವ ರಜನಿ ಶೆಟ್ಟಿ ಅವರಿಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ

Pinterest LinkedIn Tumblr

ಮಂಗಳೂರು: ಪ್ರತಿದಿನ 800ಕ್ಕೂ ಹೆಚ್ಚು ಬೀದಿನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕುತ್ತಿರುವ ಮಂಗಳೂರು ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಂಗಳೂರು ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಯು 2022ನೇ ಸಾಲಿನ ಪ್ರಶಸ್ತಿಗೆ ರಜನಿ ಶೆಟ್ಟಿ ಅವರನ್ನು ಆಯ್ಕೆ ಮಾಡಿದೆ. ಮಾ. 5ರಂದು ಮಂಗಳೂರಿನ ಬೊಕ್ಕಪಟ್ಣ ಸಮೀಪದ ಪ್ಯಾರಡೈಸ್ ಐಲ್ಯಾಂಡ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರಿನ ಮಣ್ಣಗುಡ್ಡೆಯಲ್ಲಿ ಪುಟ್ಟ ಬಾಡಿಗೆ ಮನೆಯಲ್ಲಿ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸಿಸುತ್ತಿರುವ ರಜನಿ ಶೆಟ್ಟಿ, ತಮ್ಮ ಮನೆಯನ್ನು ಗಾಯಗೊಂಡ, ರೋಗವುಳ್ಳ ನಾಯಿ, ಬೆಕ್ಕು, ಹಕ್ಕಿಗಳಿಗೆ ಜಾಗ ನೀಡಿದ್ದಾರೆ. ನಾಯಿ, ಬೆಕ್ಕು ಬಾವಿಗೆ ಬಿದ್ದಾಗ ಬಾವಿಗಿಳಿದು ಅವುಗಳನ್ನು ರಕ್ಷಿಸುತ್ತಾರೆ.

ರಜನಿ ಅವರ ಮನೆಯಲ್ಲಿ ಪ್ರತಿದಿನ 60 ಕೆಜಿ ಅಕ್ಕಿಯಿಂದ ಚಿಕನ್ ಮಿಶ್ರಿತ ಅನ್ನ ಬೇಯುತ್ತಿರುತ್ತದೆ. ಇದನ್ನು ಅವರು 800ಕ್ಕೂ ಹೆಚ್ಚು ನಾಯಿಗಳಿಗೆ ಬಡಿಸುತ್ತಾರೆ. 16 ವರ್ಷಗಳಿಂದ ನಾಯಿಗಳಿಗೆ ಊಟ ಹಾಕುವ ಅವರು, 2500ರಷ್ಟು ಪ್ರಾಣಿಗಳನ್ನು ರಕ್ಷಿಸಿದ್ದಾರೆ.

Comments are closed.