ಕರಾವಳಿ

ಕುಂದಾಪುರ ನಗರದಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಬನ್ಸ್ ರಾಘು ಚಿಕಿತ್ಸೆ ಫಲಿಸದೆ ಮೃತ್ಯು

Pinterest LinkedIn Tumblr

ಕುಂದಾಪುರ: ಭಾನುವಾರ ಸಂಜೆ ವೇಳೆಗೆ ನಗರದಲ್ಲಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಕುಂದಾಪುರದ ರಾಘವೇಂದ್ರ ಶೇರುಗಾರ್(42) ಅಲಿಯಾಸ್ ಬನ್ಸ್ ರಾಘು ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕುಂದಾಪುರದ‌ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ಭಾನುವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ‌ ಕಾರಿನಲ್ಲಿ ಸಾಗುತ್ತಿರುವಾಗ ಕಾರು ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿತ್ತು. ಗಲಾಟೆ ತೀವ್ರಗೊಂಡು ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರ ತೊಡೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದನು. ತೀವ್ರ ರಕ್ತಸ್ರಾವದೊಂದಿಗೆ ಒದ್ದಾಡುತ್ತಿದ್ದ ರಾಘವೇಂದ್ರ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೊಡೆ ಭಾಗಕ್ಕೆ ಆಳವಾಗಿ ಗಾಯವಾದ ಹಿನ್ನೆಲೆ ತೀವ್ರರಕ್ತಸ್ರಾವವಾಗಿದ್ದು, ಭಾನುವಾರ ತಡರಾತ್ರಿಯೇ ಶಸ್ತ್ರಚಿಕಿತ್ಸೆಗೊಳಪಡಿಸಲಾಗಿತ್ತು. ಆದರೆ ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಅವರು, ಕಳೆದ ಕೆಲ ವರ್ಷಗಳಿಂದ ಕುಂದಾಪುರದಲ್ಲಿ ವಾಸವಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕುಂದಾಪುರ ಭಾಗದಲ್ಲಿ ಬನ್ಸ್ ರಾಘು ಎಂದು ಗುರುತಿಸಿಕೊಂಡಿದ್ದ ರಾಘವೇಂದ್ರ ಶೇರುಗಾರ್ ಅವರು ಸಣ್ಣ-ಪುಟ್ಟ ಗಲಾಟೆಗಳಲ್ಲಿ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಮೇಲ್ನೋಟಕ್ಕೆ ಪೂರ್ವ ದ್ವೇಷದಿಂದಲೇ ರಾಘು ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆರೋಪಿ ಶಿವಮೊಗ್ಗ ಮೂಲದವನು ಎಂದು ತಿಳಿದುಬಂದಿದೆ. ಸದ್ಯ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.