ಕರಾವಳಿ

ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್‌ ಚೌಗಲೆ ಜಾಮೀನು ಅರ್ಜಿ ಸಲ್ಲಿಕೆ

Pinterest LinkedIn Tumblr

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಡಿ. 14ರಂದು ಅರ್ಜಿ ಸಲ್ಲಿಸಿರುವ ಬಗ್ಗೆ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ಪರಪ್ಪನ ಆಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್‌ ಚೌಗಲೆ ಪರ ಕೆ.ಎಸ್‌.ಎನ್‌. ರಾಜೇಶ್‌ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶ ದಿನೇಶ್‌ ಹೆಗ್ಡೆ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದಾರೆ. ಅದರಂತೆ ಡಿ. 20ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ನೋಟಿಸ್‌ ನೀಡಲಾಗಿದೆ.

ನ. 12ರಂದು ನೇಜಾರು ತೃಪ್ತಿ ಲೇಔಟ್‌ನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಪ್ರವೀಣ್‌ ಚೌಗಲೆಯನ್ನು ಪೊಲೀಸರು ನ. 14ರಂದು ಬಂಧಿಸಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಡಿ. 18ರ ವರೆಗೆ ವಿಸ್ತರಿಸಲಾಗಿದೆ. ಈತನಿಗೆ ನ್ಯಾಯಾಲಯ ಸರಕಾರಿ ವಕೀಲ ರಾಜು ಪೂಜಾರಿ ಅವರನ್ನು ನೇಮಕ ಮಾಡಿತ್ತು.

Comments are closed.