ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ. ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿ.ಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಮಾಜಿ ಶಾಸಕ, ಸಂಸದ ಮತ್ತು ಸಚಿವ ಜಯಪ್ರಕಾಶ್ ಹೆಗ್ಡೆ ಅವರು ‘ಜಾತಿ ಗಣತಿ’ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಬಿಜೆಪಿಯ ಇಬ್ಬರು ಮಾಜಿ ಶಾಸಕರಾದ ಬೈಂದೂರು ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಮತ್ತು ಮೂರು ಬಾರಿ ಮೂಡಿಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಎಂಪಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸೇರಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಇಬ್ಬರಿಗೂ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಕುಮಾರಸ್ವಾಮಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆಯಿಂದ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ, ಇಂಧನ ಸಚಿವ ಕೆ.ಜೆ ಜಾರ್ಜ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಎಂಎಲ್‌ಸಿ ಯು.ಬಿ.ವೆಂಕಟೇಶ್, ಶಾಸಕ ಎಚ್.ಡಿ.ತಮ್ಮಯ್ಯ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಪಿ.ಟಿ.ಪರಮೇಶ್ವರ್ ನಾಯ್ಕ್, ರಾಜಶೇಖರ್ ಪಾಟೀಲ್, ಆಯನೂರು ಮಂಜುನಾಥ್ ಅವರ ಸಮ್ಮುಖದಲ್ಲಿ ಈ ಮೂವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
Comments are closed.