ಕರ್ನಾಟಕ

ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್’ಗೆ ರಾಜಾತಿಥ್ಯ: ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಿ, ದರ್ಶನ್ ಮತ್ತು ಇತರರನ್ನು ಬೇರೆ-ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲು ಸಿಎಂ ಸೂಚನೆ

Pinterest LinkedIn Tumblr

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್​ಗೆ​​ ರಾಜಾತಿಥ್ಯ ನೀಡುತ್ತಿರುವ ವಿಚಾರ ಸುದ್ದಿ ಬಾರೀ ಚರ್ಚೆಗೆ ಗ್ರಾಸವಾಗಿದ್ದು ಜೈಲಿನ ಅವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ನಿರ್ಧಾರ ಕೈಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಹಾಗೂ ದರ್ಶನ್ ಮತ್ತು ಅವರ ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ಕಾರಾಗೃಹಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಡಿಜಿಪಿಗೂ ಸೂಚಿಸಿದ್ದಾರೆ.

ಈ ಮಧ್ಯೆ, ನಟ ದರ್ಶನ್‌ಗೆ ಜೈಲಿನೊಳಗೆ ಸಿಗರೇಟ್ ಸೇದಲು ಮತ್ತು ಕಾಫಿ ಕುಡಿಯಲು ಅವಕಾಶ ನೀಡಿದ ಇಬ್ಬರು ಜೈಲರ್‌ಗಳು ಸೇರಿದಂತೆ ಏಳು ಸಿಬ್ಬಂದಿಯನ್ನು ಕಾರಾಗೃಹ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಅವರು ಸೋಮವಾರ ಈ ವಿಚಾರವನ್ನು ತಿಳಿಸಿದರು.

ದರ್ಶನ್ ತಮ್ಮ ಬ್ಯಾರಕ್‌ನ ಹೊರಗೆ ಕುರ್ಚಿಯ ಮೇಲೆ ಕುಳಿತು ಒಂದು ಕೈಯಲ್ಲಿ ಸಿಗರೇಟ್ ಮತ್ತು ಮತ್ತೊಂದು ಕೈಯಲ್ಲಿ ಕಾಫಿ ಮಗ್‌ ಹಿಡಿದುಕೊಂಡಿರುವ ಫೋಟೋ ಭಾನುವಾರ ವೈರಲ್ ಆಗಿತ್ತು.

Comments are closed.