ಉಡುಪಿ: ಜಾರ್ಜ್ ಫೆರ್ನಾಂಡಿಸ್ ರವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಅನುಷ್ಠಾನಕ್ಕೆ ತಂದ ಮಹತ್ವದ ಕೊಂಕಣ ರೈಲ್ವೆ ಯೋಜನೆಗೆ ಇಂದಿಗೆ ಸುಮಾರು 30 ವರ್ಷಗಳು ತುಂಬುತ್ತಿದ್ದು, ಏಕ ಹಳಿಯ ಪ್ರಯಾಣ ಸೌಲಭ್ಯ ಇರುವುದರಿಂದ ಹೆಚ್ಚುವರಿ ರೈಲ್ವೆ ಓಡಾಡಲು ಕಷ್ಟವಾಗುತ್ತದೆ ಮತ್ತು ಕೊಂಕಣ ರೈಲ್ವೆಯಲ್ಲಿ ಅನುದಾನದ ಕೊರತೆ ಇರುವುದರಿಂದ ನೂತನ ರೈಲ್ವೆ ನಿಲ್ದಾಣಗಳೂ ಸೇರಿದಂತೆ, ಮೂಲಭೂತ ಸೌಕರ್ಯ ವ್ಯವಸ್ಥೆಗೆ ಆರ್ಥಿಕ ಕೊರತೆ ಉಂಟಾಗುತ್ತಿದೆ. ಆದ್ದರಿಂದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡುವುದರ ಮೂಲಕ ಭಾರತ ಸರ್ಕಾರದ ಅನುದಾನದ ಪಡೆದು ಕರಾವಳಿ ಪ್ರದೇಶದಲ್ಲೂ ಕೂಡ ಮಹತ್ವದ ರೈಲ್ವೆ ಯೋಜನೆ ಅನುಷ್ಠಾನ ಮಾಡಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲರನ್ನು ಭೇಟಿ ಮಾಡಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಸಚಿವರಿಗೆ ಮನವಿ ಸಲ್ಲಿಸಿ, ಸುದೀರ್ಘವಾಗಿ ಚರ್ಚಿಸಿತು.
ಭಾರತೀಯ ರೈಲ್ವೆಯಲ್ಲಿ ವಿಲೀನಗೊಂಡರೆ, ಮುಂದಿನ ದಿನಗಳಲ್ಲಿ ಸಿಂಗಲ್ ಲೈನನ್ನು ಹೊರತುಪಡಿಸಿ, ಡಬ್ಲಿಂಗ್ ಮಾಡುವುದು ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆ ಅನುಷ್ಠಾನವಾಗುವ ಲಭ್ಯ ಅವಕಾಶವನ್ನು ಸಚಿವರಿಗೆ ನಿಯೋಗ ಮನವರಿಕೆ ಮಾಡಿತು. ಸುದೀರ್ಘ ಚರ್ಚೆಯ ನಂತರ ಸಹಮತ ವ್ಯಕ್ತಪಡಿಸಿದ ಎಂ. ಬಿ. ಪಾಟೀಲ್ ತಕ್ಷಣವೇ ಇಲಾಖಾ ಪ್ರಧಾನ ಕಾರ್ಯದರ್ಶಿ ಮಂಜುಳಾ ರವರಿಗೆ ದೂರವಾಣಿ ಮೂಲಕ ಸೂಚನೆ ನೀಡಿ ತಕ್ಷಣ ಕಡತ ಸಿದ್ದಪಡಿಸಿ, ಮುಂದೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು, ಭಾರತೀಯ ರೈಲ್ವೆಯಲ್ಲಿ ವಿಲೀನವಾಗುವ ಬಗ್ಗೆ ಸಂಸದರು ಮತ್ತು ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.
ಸಂಸದ ಕೋಟರೊಂದಿಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭಾಗವಹಿಸಿದ್ದರು.
Comments are closed.